ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ತೆರಳಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹೈಕಮಾಂಡ್ ಸೂಚನೆ ನೀಡಿದ್ದು, ಬಂಡಾಯ ಸಾರಿದ ಜಗದೀಶ್ ಶೆಟ್ಟರ್ ಸ್ಪರ್ಧಿಸುವುದಾಗಿ ಹೇಳಿದ್ದರು. ನಂತರ ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ತೆರಳಿ ನಡ್ಡಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ದೆಹಲಿಗೆ ಬಂದು ತಮ್ಮನ್ನು ಭೇಟಿಯಾಗುವಂತೆ ನಡ್ಡಾ ಹೇಳಿದ್ದರು. ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದೇನೆ. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ. ನಡ್ಡಾ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವಂತೆ ಮಾಜಿ ಸಿಎಂ ಯಡಿಯೂರಪ್ಪ ವರಿಷ್ಠರಿಗೆ ಹೇಳಿದ್ದಾರೆ. ಶೆಟ್ಟರ್ ಅವರಿಗೆ ಟಿಕೆಟ್ ಕೊಡುವಂತೆ ನಾನು ಕೂಡ ವರಿಷ್ಠರಿಗೆ ಹೇಳಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಬಿಡುಗಡೆಯಾಗಿರುವ ಎರಡೂ ಪಟ್ಟಿಗಳಲ್ಲಿ ಶೆಟ್ಟರ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಹೀಗಾಗಿ ಅಳೆದು ತೂಗಿ ಶೆಟ್ಟರ್ ಅವರಿಗೇ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.