ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸೇರಿದಂತೆ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶೆಟ್ಟರ್ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ್ದು, ನಿನ್ನೆ ರಾತ್ರಿಯೇ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದರು.
ಇಂದು ಬೆಳಿಗ್ಗೆ ಎಂ.ಬಿ. ಪಾಟೀಲ್ ಅವರೊಂದಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ ಜಗದೀಶ್ ಶೆಟ್ಟರ್ ಮಂತ್ರಿಯಾಗಿ, ಮುಖ್ಯಮಂತ್ರಿ ಆಗಿ, ಸ್ಪೀಕರ್ ಹಾಗೂ ವಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಇಂದು ಐತಿಹಾಸಿಕ ದಿನವಾಗಿದೆ. ಸರಳ ಸಜ್ಜನ ರಾಜಕಾರಣಿಯಾಗಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿರುವುದು ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬೆಳವಣಿಗೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಶಕ್ತಿ ಬರಲಿದೆ. ಅವರು ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರುತ್ತಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಅವರೊಂದಿಗೆ ಅಭಯ್ ಪಾಟೀಲ್ ಸೇರಿ ಹಲವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
ಶೆಟ್ಟರ್ ಆರ್.ಎಸ್.ಎಸ್. ಹಿನ್ನಲೆಯಿಂದ ಬಂದವರಾಗಿದ್ದರೂ ನಮ್ಮೊಂದಿಗೆ ಅನ್ಯೋನ್ಯತೆಯಿಂದ ಇದ್ದರು. ಅವರ ಸೇರ್ಪಡೆಯಿಂದ ಕಾಂಗ್ರೆಸ್ ಗೆ 150 ಸ್ಥಾನ ಬರುವುದು ಖಾತ್ರಿಯಾಗಿದೆ ಎಂದು ಹೇಳಿದ್ದಾರೆ.