ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಅವರು ಪಕ್ಷಕ್ಕೆ ಮರಳಿರುವುದನ್ನು ಸಂಭ್ರಮಿಸಲು ಅವರ ಬೆಂಬಲಿಗರು ಹುಬ್ಬಳ್ಳಿಯ ಅವರ ನಿವಾಸದ ಮುಂದೆ ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದರು. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಸೇರುವ ಮೊದಲು ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಶೆಟ್ಟರ್ ಬಿಜೆಪಿಯನ್ನು ತೊರೆದು 2023 ರಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಸೇರಿದ್ದರು. ಇದೀಗ ಮತ್ತೆ ಮರಳಿ ಗೂಡಿಗೆ ಬಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಶೆಟ್ಟರ್ ವಿರುದ್ಧ ಘೋಷಣೆ ಕೂಗಿದರು. ಶೆಟ್ಟರ್ ಕಾಂಗ್ರೆಸ್ ತೊರೆದ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು. ಪಕ್ಷವನ್ನು ತೊರೆದ ಒಂದು ವರ್ಷದೊಳಗೆ ಬಿಜೆಪಿಗೆ ಮರಳಿದ್ದಕ್ಕಾಗಿ ಹಲವಾರು ಕಾಂಗ್ರೆಸ್ ಮುಖಂಡರು ಮತ್ತು ಹುಬ್ಬಳ್ಳಿಯ ನಿವಾಸಿಗಳು ಸಾಮಾಜಿಕ ಮಾಧ್ಯಮ ಪೋಸ್ಟ್ ಗಳಲ್ಲಿ ಶೆಟ್ಟರ್ ಅವರನ್ನು ಟೀಕಿಸಿದರು.