
ಬೆಂಗಳೂರು: ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಹಲವು ಮುಖಂಡರು ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ, ರಾಮನಗರದ ಜೆಡಿಎಸ್ ಮುಖಂಡರು ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಮುಖಂಡ ಚನ್ನಪಟ್ಟಣ ಮಾಜಿ ಶಾಸಕ ಎಂ.ಸಿ ಅಶ್ವಥ್ ಹಾಗೂ ಅವರ ಬೆಂಬಲಿಗರು, ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಜಬಿ ಉಲ್ಲಾಖಾನ್, ಎಂ.ಸಿ ಕರಿಯಪ್ಪ, ಮುಕ್ರಂ, ಬೋಜೇಗೌಡ ಸೇರಿದಂತೆ ಚನ್ನಪಟ್ಟಣ ಹಾಗೂ ರಾಮನಗರದ ಜೆಡಿಎಸ್ ನ ಅನೇಕ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಸಂಸದ ಡಿ.ಕೆ ಸುರೇಶ್, ರಾಮನಗರ ಡಿಸಿಸಿ ಅಧ್ಯಕ್ಷ ಗಂಗಾಧರ್ ಮೊದಲಾದವರು ಉಪಸ್ಥಿತರಿದ್ದರು.