ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಆಘಾತಕ್ಕೆ ಒಳಗಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದರು. ಚುನಾವಣೆಯಲ್ಲಿ ಜೆಡಿಎಸ್ ಕೂಡ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ವಿಧಾನಸಭೆ ಚುನಾವಣೆ ಫಲಿತಾಂಶ ಅತೀವ ಬೇಸರ ತಂದಿದೆ. ಪಕ್ಷವನ್ನು ಮರು ನಿರ್ಮಾಣ ಮಾಡುವ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಯುವ ಘಟಕದ ರಾಜ್ಯಾಧ್ಯಕ್ಷನಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ತಮ್ಮ ಮಾರ್ಗದರ್ಶನದಿಂದ ಕರ್ತವ್ಯ ನಿರ್ವಹಿಸಿದ್ದೇನೆ. ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಪಕ್ಷವನ್ನು ಬಲವಾಗಿ ಕಟ್ಟುವ ದಿಸೆಯಲ್ಲಿ ನಾವೆಲ್ಲರೂ ಅರ್ಪಣೆಯ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕಿದೆ. ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ಯುವ ಜೆಡಿಎಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಅಂಗೀಕರಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.