ಬೆಂಗಳೂರು: ಸಂಕ್ರಾಂತಿ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ನೇಮಕವಾಗುವ ಸಾಧ್ಯತೆ ಇದೆ.
ಹಾಲಿ ರಾಜ್ಯಾಧ್ಯಕ್ಷರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆರು ತಿಂಗಳಾಗಿದ್ದು, ಪಕ್ಷ ಸಂಘಟನೆ ಕಾರ್ಯ ದುರ್ಬಲವಾಗಿದೆ. ಹೀಗಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಲು ಚಿಂತನೆ ನಡೆದಿದೆ.
ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಕೆಲವು ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದರೂ ಪೂರ್ಣ ಪ್ರಮಾಣವಾಗಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನೇ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಬೇಕೆಂಬ ಚರ್ಚೆ ಜೆಡಿಎಸ್ ವಲಯದಲ್ಲಿ ನಡೆದಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಜಯಗಳಿಸಿದ್ದರೆ ಇಷ್ಟೊತ್ತಿಗೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತಿತ್ತು. ಸೋಲಿನ ಕಾರಣ ಮೀನಮೇಷ ಎಣಿಸಲಾಗುತ್ತಿದೆ. ಈ ನಡುವೆ ಪಕ್ಷದ ಹಿರಿಯ ನಾಯಕರಾಗಿರುವ ಜಿ.ಟಿ. ದೇವೇಗೌಡ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂಬ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.