ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಇತರ 16 ಮಂದಿ ಗಾಯಗೊಂಡಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರ ಶನಿವಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಅದರ ವರದಿಯನ್ನು 24 ಗಂಟೆಗಳ ಒಳಗೆ ಸಲ್ಲಿಸಬೇಕು. ಎನ್ಐಸಿಯುನ ಹೊರ ಭಾಗದಲ್ಲಿದ್ದ ಮಕ್ಕಳನ್ನು ರಕ್ಷಿಸಲಾಗಿದ್ದು, ಒಳ ಭಾಗದಲ್ಲಿದ್ದ ಕೆಲವರನ್ನು ರಕ್ಷಿಸಲಾಗಿದೆ.
ಮೃತರಿಗೆ ಐದು ಲಕ್ಷ ರೂಪಾಯಿ ಮತ್ತು ತೀವ್ರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ.
ಶನಿವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಯುಪಿ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಘಟನೆಯ ತನಿಖೆಗೆ ಸೂಚನೆ ನೀಡಲಾಗಿದೆ. 24 ಗಂಟೆಯೊಳಗೆ ತನಿಖಾ ವರದಿ ಸಲ್ಲಿಸುವಂತೆ ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ. 10 ನವಜಾತ ಶಿಶುಗಳು ಸಾವನ್ನಪ್ಪಿವೆ, 7 ಮಂದಿಯನ್ನು ಗುರುತಿಸಲಾಗಿದೆ, 3 ಇನ್ನೂ ಪತ್ತೆಯಾಗಿಲ್ಲ, ಅಗತ್ಯವಿದ್ದಲ್ಲಿ ಡಿಎನ್ಎ ಪರೀಕ್ಷೆಯನ್ನು ನಡೆಸಲಾಗುವುದು. ಆಕ್ಸಿಜನ್ ಕಾನ್ಸೆಂಟ್ರೇಟರ್ ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿರುವಂತೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬಹುಶಃ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಗಮನ ಹರಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸರ್ಕಾರಿ ವೈದ್ಯಕೀಯ ಕಾಲೇಜು 1968 ರಲ್ಲಿ ಪ್ರಾರಂಭವಾಗಿದ್ದು, ಉತ್ತರ ಪ್ರದೇಶದ ಬುಂದೇಲ್ಖಂಡ್ ಪ್ರದೇಶದಲ್ಲಿನ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾಗಿದೆ.