ಬಲ್ಲಿಯಾ: ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಹುಡುಗಿಗೆ ಯುವಕನೊಬ್ಬ ಬೆಂಕಿ ಹಚ್ಚಿದ್ದಾನೆ.
21 ವರ್ಷದ ಯುವಕ ಕೃಷ್ಣ ಗುಪ್ತಾ ಇಂತಹ ಕೃತ್ಯ ಎಸಗಿದ ಆರೋಪಿ ಎಂದು ಗುರುತಿಸಲಾಗಿದೆ. ದುಬಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನವೆಂಬರ್ 6 ರಂದು ಘಟನೆ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಗೆಳೆತನ ಹೊಂದಿದ್ದ ಆರೋಪಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ನಂತರ ಇಂತಹ ಕೃತ್ಯವೆಸಗಿದ್ದಾನೆ ಎಂದು ಪೊಲೀಸ್ ಠಾಣೆಯ ಎಸ್.ಹೆಚ್.ಒ. ಅನಿಲ್ ಚಂದ್ರ ತಿವಾರಿ ಮಾಹಿತಿ ನೀಡಿದ್ದಾರೆ.
ಬಾಲಕಿಯ ಪರಿಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ವಾರಣಾಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಗಳನ್ನು ಮನೆಯಿಂದ ಅಪಹರಿಸಿ ಬೆಂಕಿ ಹಚ್ಚಲಾಗಿದೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.