alex Certify ಜಿಂದಾಲ್ ಕಂಪನಿಗೆ 3,666 ಎಕರೆ ಭೂಮಿ: ಬಿಎಸ್ ವೈ ನೇತೃತ್ವದ ಸರ್ಕಾರದ ಆದೇಶದಂತೆ, ಹೈಕೋರ್ಟ್ ಸೂಚನೆಯಂತೆ ಜಾರಿ: ಎಂ.ಬಿ. ಪಾಟೀಲ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಂದಾಲ್ ಕಂಪನಿಗೆ 3,666 ಎಕರೆ ಭೂಮಿ: ಬಿಎಸ್ ವೈ ನೇತೃತ್ವದ ಸರ್ಕಾರದ ಆದೇಶದಂತೆ, ಹೈಕೋರ್ಟ್ ಸೂಚನೆಯಂತೆ ಜಾರಿ: ಎಂ.ಬಿ. ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ವಿಚಾರವಾಗಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿನ ತೀರ್ಮಾನದಂತೆ ಹೈಕೋರ್ಟ್ ನೀಡಿರುವ ಆದೇಶದಂತೆ ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ತಿಳಿಸಿದರು.

ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ಯಾವ ಒಳ ಒಪ್ಪಂದವೂ ಆಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಜಿಂದಾಲ್ ಗೆ ಭೂಮಿ ವಿಚಾರವಾಗಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ. ಹಾಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು ಎಂದು ತಿರುಗೇಟು ನೀಡಿದರು.

ಬಿ.ಎಸ್. ಯಡಿಯೂರಪ್ಪ ಸರ್ಕಾರದ ಅವಧಿಯ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್ ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ ಎಂದು ವಿವರಿಸಿದರು.

ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ ₹90 ಸಾವಿರ‌ ಕೋಟಿ ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ ಎಂದರು.

ಇದೇ ವೇಳೆ ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿ ಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಅರವಿಂದ ಬೆಲ್ಲದ ಜಾಣ ಮೌನವಹಿಸಿರುವುದು ಯಾಕೆ? ಈ ಬಗ್ಗೆ ಉತ್ತರ ನೀಡಲಿ ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...