ಬೆಂಗಳೂರು : ರಾಜ್ಯ ಸರ್ಕಾರವು 750 ‘ಗ್ರಾಮ ಆಡಳಿತಾಧಿಕಾರಿ’ಗಳ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ.
ಹೌದು, ಬರೋಬ್ಬರಿ 750 ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಈಗಾಗಲೇ ಸರ್ಕಾರ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.
ಈ ಮೊದಲು ಪಿಯುಸಿ ಅಂಕದ ಆಧಾರದ ಮೇಲೆ ವಿಲೇಜ್ ಅಕೌಂಟೆಂಟ್ ನ್ನು ನೇಮಕ ಮಾಡಲಾಗುತ್ತಿತ್ತು, ಆದರೆ ಇದೀಗ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. KEA /KPSC ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ. ಒಟ್ಟಾರೆ ಒಂದೂವರೆ ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಯೋಚಿಸಿದ್ದು, ಸದ್ಯಕ್ಕೆ 750 ಹುದ್ದೆಗಳನ್ನು ಭರ್ತಿ ಮಾಡಲಿದೆ.
ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಲು ಪ್ರಸ್ತುತ ಇರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಖಾಲಿಯರುವ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ಇತ್ತೀಚೆಗಷ್ಟೇ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು.