ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. ಯುವ ಜನತೆಗಾಗಿ, ಪದವಿ, ಇಂಜನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಬೃಹತ್ ಯುವ ಸಮೃದ್ಧಿ ಸಮ್ಮೇಳ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಫೆಬ್ರವರಿ 26 ಹಾಗೂ 27ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಬಗ್ಗೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಉದ್ಯೋಗ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹೆಸರಾಂತ 500ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ.
ಉದ್ಯೋಗ ಮೇಳದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 600ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ಪ್ರತಿಯೊಂದು ಸ್ಟಾಲಿಗೂ ಭೇಟಿ ನೀಡಿ, ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಎಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಕುರಿತು ಮಾಹಿತಿ ಪಡೆಯಬಹುದು.
ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನ ಉದ್ಯೋಗಾಕಾಂಕ್ಷಿಗಳು, ಅಭ್ಯರ್ಥಿಗಳು ಆಗಮಿಸಲಿದ್ದು, ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಚಿತ ಬಸ್ ವ್ಯವಸ್ಥೆ ಇರಲಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.