ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪದವಿಮಟ್ಟದ ಕಾಲೇಜುಗಳನ್ನು ಜುಲೈ ಅಂತ್ಯದಿಂದ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಜುಲೈ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಲಸಿಕೆ ನೀಡಿದ ನಂತರ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಹೇಳಲಾಗಿದೆ.
ಜುಲೈ ಆರಂಭದಿಂದಲೇ ಲಸಿಕೆ ನೀಡಲಿದ್ದು, ನಂತರದಲ್ಲಿ ಕಾಲೇಜುಗಳನ್ನು ಆರಂಭಿಸಲಾಗುವುದು. ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ.
ಡಾ. ದೇವಿ ಶೆಟ್ಟಿ ನೇತೃತ್ವದ ಸಮಿತಿ ಕೋವಿಡ್ ಮೂರನೆಯ ಅಲೆ ಮುನ್ನೆಚ್ಚರಿಕೆ ಕುರಿತಂತೆ ವರದಿ ನೀಡಿದ್ದು, ಈ ಸಮಿತಿಯ ಶಿಫಾರಸ್ಸಿನಂತೆ ಮರಳಿ ಕಾಲೇಜಿಗೆ ಎಂಬ ಘೋಷ ವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ರಾಜ್ಯಾದ್ಯಂತ ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗುವುದು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಕಾಲೇಜು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಜುಲೈ ಆರಂಭದಿಂದಲೇ ಲಸಿಕೆ ನೀಡುವುದನ್ನು ಪ್ರಾರಂಭಿಸಿ ಜುಲೈ ಕೊನೆಯ ವೇಳೆಗೆ ಕಾಲೇಜು ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.