ಬೆಂಗಳೂರು: ರಾಜ್ಯದಲ್ಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್(HSRP) ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ಜೂನ್ 12ರ ವರೆಗೆ ದಂಡ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.
ಮೇ 31ರವರೆಗೆ ಹೆಚ್.ಎಸ್.ಆರ್.ಪಿ. ಅಳವಡಿಕೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೆಚ್ಎಸ್ಆರ್ಪಿ ತಯಾರಿಕಾ ಕಂಪನಿ ಬಿ.ಎನ್.ಡಿ. ಎನರ್ಜಿ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರ ನ್ಯಾಯಪೀಠಕ್ಕೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಲಾಗಿದೆ.
ಅರ್ಜಿ ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೂಬೆನ್ ಜೇಕಬ್ ಪ್ರಕರಣಕ್ಕೆ ಸಂಬಂಧಿಸಿದ ಮೂಲದ ದಾವೆ ಜೂನ್ 11ರಂದು ವಿಚಾರಣೆಗೆ ನಿಗದಿಯಾಗಿದ್ದು, ಮಧ್ಯಂತರ ಅರ್ಜಿ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು ಎಂದು ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಜೂನ್ 11ರ ವರೆಗೆ ಹೆಚ್ಎಸ್ಆರ್ಪಿ ಅಳವಡಿಕೆಗೆ ಅವಕಾಶ ನೀಡಬಹುದೇ ಎಂದು ಪ್ರಶ್ನಿಸಿತು. ಇದಕ್ಕೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಉತ್ತರಿಸಿ ಜೂ. 12ರ ವರೆಗೆ ಹೆಚ್ಎಸ್ಆರ್ಪಿ ಅಳವಡಿಸಿದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿದೆ.