ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಯ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ಪೌರಾಡಳಿತ ಸಚಿವ ಕೆ.ಸಿ. ನಾರಾಯಣ ಗೌಡ ಅವರು, ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆಯನ್ನು ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪೌರಸೇವಾ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿಮಾ ಯೋಜನೆ, ಭವಿಷ್ಯನಿಧಿ ಸೌಲಭ್ಯ ಒದಗಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲು 15 ದಿನದೊಳಗೆ ವರದಿ ನೀಡುವಂತೆ ತಿಳಿಸಿದ್ದಾರೆ.
ಪೌರಸೇವಾ ನೌಕರರು ಸೇವೆ ವೇಳೆಯಲ್ಲಿ ಮೃತಪಟ್ಟರೆ ಶವ ಸಂಸ್ಕಾರಕ್ಕೆ 7500 ರೂ. ಸಹಾಯಧನ ನೀಡುತ್ತಿದ್ದು ಇದನ್ನು ಹೆಚ್ಚಿಸಲು ಪರಿಶೀಲನೆ ನಡೆಸಲಾಗುವುದು. ನೌಕರರ ಕಾಯಂ ಮಾಡುವ ಬಗ್ಗೆ, ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ 3500 ರೂ. ವಿಶೇಷ ಭತ್ಯೆ ನೀಡುತ್ತಿದ್ದು, ಅದನ್ನು 7 ಸಾವಿರಕ್ಕೆ ಏರಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.