
ಚಿಕ್ಕಮಗಳೂರು: ರಾಜ್ಯಾದ್ಯಂತ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು ಇಂಧನ ಸಚಿವ ಕೆ.ಜೆ. ಚಾರ್ಜ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಅದನ್ನು ರಾಜ್ಯಾದ್ಯಂತ 7 ಗಂಟೆಗೆ ಹೆಚ್ಚಳ ಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಮಳೆ ಇಲ್ಲದೆ ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾಗಿತ್ತು. ಥರ್ಮಲ್ ವಿದ್ಯುತ್ ಸ್ಥಾವರಗಳ ನಿರ್ವಹಣೆ ಕೈಗೊಂಡಿದ್ದರಿಂದ ವಿದ್ಯುತ್ ಉತ್ಪಾದನೆಗೆ ಹಿನ್ನಡೆಯಾಗಿತ್ತು. ಮೋಡ ಇದ್ದ ಕಾರಣ ಸೋಲಾರ್ ವಿದ್ಯುತ್, ಗಾಳಿ ಇಲ್ಲದೆ ಪವನ ವಿದ್ಯುತ್ ಕೂಡ ಕಡಿಮೆಯಾಗಿತ್ತು ಎಂದು ಹೇಳಿದ್ದಾರೆ.
ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಪ್ರಯತ್ನಿಸಿ ಹಣ ಕೊಟ್ಟರೂ ವಿದ್ಯುತ್ ಸಿಗುತ್ತಿರಲಿಲ್ಲ. ಹೀಗಾಗಿ ಕೃಷಿ ಪಂಪ್ಸೆಟ್ ಗಳಿಗೆ 5 ಗಂಟೆ ವಿದ್ಯುತ್ ನೀಡಲು ತೀರ್ಮಾನಿಸಲಾಗಿತ್ತು. ಈಗ ಕೆಲವು ಕಡೆ ಮಳೆಯಾಗಿ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ. ವಿದ್ಯುತ್ ಉತ್ಪಾದನೆ ಕೂಡ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಪಂಜಾಬ್, ಉತ್ತರ ಪ್ರದೇಶದಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಕಡಿಮೆ ಆಗಿರುವುದರಿಂದ ಹಿಮಾಚಲ ಪ್ರದೇಶದಿಂದ ವಿದ್ಯುತ್ ಖರೀದಿ ನಿಲ್ಲಿಸಲಾಗಿದೆ. ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ. ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.