ಕೋಲಾರ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ.
ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಿಸಿದ್ದಾರೆ.
ನ್ಯಾಯಯುತವಾಗಿ ಇಷ್ಟು ವರ್ಷ ರಾಜಕಾರಣ ಮಾಡಿದ್ದೇನೆ. ಹಣ ಪಡೆದು ರಾಜಕೀಯ ಮಾಡಿಲ್ಲ ಎಂದು ಹೇಳಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಮಾಸಾಶನ ಫಲಾನುಭವಿಗಳಿಗೆ ಪಿಂಚಣಿ ಸಿಗುತ್ತಿಲ್ಲ. ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತಗೊಳಿಸಲಾಗಿದೆ ಎಂದು ದೂರಿದ್ದಾರೆ.
ಗ್ರಾಮಗಳ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಬೇಕು. ಇದಕ್ಕಾಗಿ ಕಾಳಜಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.