ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರು ಸ್ಪರ್ಧಿಸಲಿದ್ದಾರೆ.
ತಿರುಪತಿ ಕ್ಷೇತ್ರದ ಸಂಸದರಾಗಿದ್ದ ಬಲ್ಲಿ ದುರ್ಗಾ ಪ್ರಸಾದ್ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ರತ್ನಪ್ರಭಾ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ರತ್ನಪ್ರಭಾ ಅವರು 2019 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರತ್ನಪ್ರಭಾ ಅವರು ವೈ.ಎಸ್. ರಾಜಶೇಖರರೆಡ್ಡಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವಿಭಜಿತ ಆಂಧ್ರಪ್ರದೇಶದಲ್ಲಿಯೂ ಸೇವೆ ಸಲ್ಲಿಸಿ ನಂತರ ಕರ್ನಾಟಕಕ್ಕೆ ಮರಳಿದ್ದರು. ಇಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ತಿರುಪತಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಇದಕ್ಕೆ ರತ್ನಪ್ರಭಾ ಸಂತಸ ವ್ಯಕ್ತಪಡಿಸಿದ್ದಾರೆ. ನನಗೆ ಟಿಕೆಟ್ ಸಿಕ್ಕಿದ್ದು ಸರ್ಪ್ರೈಸ್. ನನ್ನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಲಾಗಿದೆ. ಪಕ್ಷದ ಗೆಲುವಿಗೆ ಹೋರಾಡುತ್ತೇನೆ ಎಂದು ಅವರು ಹೇಳಿದ್ದಾರೆ.