ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಳೆದ ವರ್ಷದ ಮಳೆಗಾಲದ ಅವಧಿಯಲ್ಲಿ ಹಾನಿಗೊಳಗಾಗಿದ್ದ ನಗರದ 87 ಶಾಲೆಗಳನ್ನು ದುರಸ್ತಿಗೆ ಒಳಪಡಿಸಲಾಗಿದೆ ಈಗಾಗಲೇ 70 ಶಾಲೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ 6.5 ಕೋಟಿ ರೂಗಳ ವೆಚ್ಚದಲ್ಲಿ 45 ಶಾಲೆಗಳಿಗೆ 460 ಕಂಪ್ಯೂಟರ್’, ಓವರ್ ಹೆಡ್ ಪ್ರೋಜೆಕ್ಟರ್, ಲ್ಯಾಪ್ಟಾಪ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್ ನಲ್ಲಿ ಅನುದಾನವನ್ನು ಕಾಯ್ದಿರಿಸಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ರಾಜ್ಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ನಗರದ 87 ಶಾಲೆಗಳ ದುರಸ್ತಿಗೆ ಕೋಟಿ ರೂ. ಖರ್ಚು ಮಾಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಮಾದರಿ ಶಾಲೆಗಳನ್ನು ನಿರ್ಮಿಸಲಾಗಿದೆ. ಈ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಯಾವುದೆ ವಿದ್ಯಾರ್ಥಿಗಳು ಕೀಳಿರಿಮೆ ಇಲ್ಲದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಗರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯದಲ್ಲಿ ಸ್ಥಳೀಯ ಖಾಸಗಿ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಹಾಯ ಹಸ್ತ ನೀಡಿದ್ದಾರೆ ಎಂದು ತಿಳಿಸಿದ್ದಾರೆ.