ಶಿವಮೊಗ್ಗ: ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿಯೂ ಭಷ್ಟಾಚಾರ ಆರೋಪ ಕೇಳಿಬಂದಿದ್ದು, ಅಂತರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂ.ರಾಜೀವ್ ತಾರಾನಾಥ್ ಬಳಿ ಅಧಿಕಾರಿಗಳು ಕಮಿಷನ್ ಕೇಳಿದ್ದಾರೆ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಲಾವಿದರ ಬಳಿ ಕಮಿಷನ್ ಕೇಳಿದವರು ಮತ್ತು ಅವರ ಮಕ್ಕಳು ಲಕ್ವಾ ಹೊಡೆದು ಸಾಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಾವಿದರ ಬಳಿ ಕಮಿಷನ್ ಕೇಳುವ ಮೂಲಕ ಅವಮಾನ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ ವಿರುದ್ಧ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕಮಿಷನ್ ದಂಧೆಗೆ ಕಡಿವಾಣ ಹಾಕಬೇಕು. ಅದನ್ನು ಬಿಟ್ಟು ಉಡಾಫೆ ಮಾಡುತ್ತಿರುವ ಇಂತಹ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ರಾಜ್ಯ ಎಂದೂ ಕಂಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.