ಬೆಂಗಳೂರು: ಪದವಿ ಕಾಲೇಜುಗಳು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ-ಸೆಟ್, ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿದೆ.
ಕೆ-ಸೆಟ್ ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳಲ್ಲಿ ಶೇ. 84 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ ಜಿಲ್ಲೆಗಳ ಒಟ್ಟು 252 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಯಾವುದೇ ಗೊಂದಲ, ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲ ಕಡೆ ಸುಸೂತ್ರವಾಗಿ ಪರೀಕ್ಷೆ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳಲ್ಲಿ 64 ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಮಾತ್ರ ಪರೀಕ್ಷೆ ನಡೆದಿದೆ. ಈ ಪರೀಕ್ಷೆ ಮೂಲಕ ಪ್ರಾಧಿಕಾರದಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ನಲ್ಲಿ ನಿಗಾ ವಹಿಸಲಾಗಿತ್ತು. ಯಾವುದೇ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಕ್ರಮ ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ.