ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ನವೆಂಬರ್ 24ರಂದು ಕೆ-ಸೆಟ್ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 6302 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.
1,06,433 ಅಭ್ಯರ್ಥಿಗಳು ಕೆ-ಸೆಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 89,416 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 3275 ಪುರುಷರು, 3020 ಮಹಿಳೆಯರು, 7 ಮಂದಿ ತೃತೀಯ ಲಿಂಗಿಗಳು, 293 ವಿಕಲಚೇತನರು ಸೇರಿ ಒಟ್ಟು 6302 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ಅರ್ಹತೆ ಹೊಂದಿದ ಅಭ್ಯರ್ಥಿಗಳ ಸಂಖ್ಯೆ ಶೇಕಡ 6ರಷ್ಟು ಇದೆ.
ಯುಜಿಸಿ ಮತ್ತು ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹರಿಗೆ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.