ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಎನ್.ಡಿ.ಎ. ಅಭ್ಯರ್ಥಿ ಡಾ. ಕೆ. ಸುಧಾಕರ್ ಮಹಾನ್ ಭ್ರಷ್ಟರಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.
2018ರಲ್ಲಿ ಮುಖ್ಯಮಂತ್ರಿ ಆಗಿದ್ದರೂ 35,000ಕ್ಕೂ ಹೆಚ್ಚು ಮತಗಳ ಅಂತರದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿರಲ್ಲ, ಆಗ ನೀವು ಎಷ್ಟು ಭ್ರಷ್ಟಾಚಾರ ಮಾಡಿದ್ದೀರಿ ಎಂದು ಜನ ನಿಮ್ಮನ್ನು ಸೋಲಿಸಿದರಾ ಎಂದು ಪ್ರಶ್ನಿಸಿದ್ದಾರೆ.
2019ರಲ್ಲಿ ನಿಮ್ಮ ನಾಯಕ ರಾಹುಲ್ ಗಾಂಧಿ ಅಮೇಥಿಯಲ್ಲಿ 55,000ಕ್ಕೂ ಅಧಿಕ ಮತಗಳ ಅಂತರದಿಂದ ಸೋತಿದ್ದರು. ರಾಹುಲ್ ಗಾಂಧಿ ನಿಮ್ಮ ಪ್ರಕಾರ ಭ್ರಷ್ಟಾಚಾರ ಮಾಡಿದ್ದಕ್ಕೆ ಸೋತಿದ್ದಾ ಎಂದು ಪ್ರಶ್ನಿಸಿದ್ದಾರೆ.
ನನ್ನ ಮೇಲೆ ತನಿಖೆಗೆ ಆದೇಶ ಮಾಡಿದ್ದೀರಿ. ಆದರೆ, ಇನ್ನೂ ತನಿಖೆ ನಡೆಯುತ್ತಿರುವಾಗಲೇ ಸಾಕ್ಷ್ಯ ಸಿಕ್ಕಿದೆ. ನಮಗೆ ಮಾಹಿತಿ ಇದೆ ಎಂದು ಹೇಳಿದ್ದೀರಿ. ಅದರಲ್ಲಿಯೇ ನಿಮ್ಮ ತನಿಖೆ ಎಷ್ಟು ಪೂರ್ವಾಗ್ರಹ ಪೀಡಿತ, ಎಷ್ಟು ನಿಷ್ಪಕ್ಷಪಾತ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಸಮೀಕ್ಷೆಗಳು ಚಿಕ್ಕಬಳ್ಳಾಪುರದಲ್ಲಿ ಎನ್ಡಿಎ ಗೆಲ್ಲುತ್ತದೆ, ನಾನು ಗೆಲ್ಲುತ್ತೇನೆ ಎಂದು ಹೇಳುತ್ತಿದ್ದು, ಹತಾಶೆಯಿಂದ ನನ್ನ ಮೇಲೆ ಕೆಸರೆರಚುವ ಪ್ರಯತ್ನ ಮಾಡುತ್ತಿದ್ದೀರಿ. ಈ ರೀತಿ ಅಪಪ್ರಚಾರ, ತೇಜೋವಧೆಗಳು ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗುತ್ತವೆ ಎಂದು ಹೇಳಿದ್ದಾರೆ.