ಲೋಕಸಭಾ ಚುನಾವಣೆ ಬಳಿಕ ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ನಡೆಯಲು ವೇದಿಕೆ ಸಿದ್ಧವಾಗಿದೆ. ಇದರ ಮಧ್ಯೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೂ ಸಹ ಚುನಾವಣೆ ನಡೆಯಬೇಕಿದ್ದು ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 7 ಸ್ಥಾನ ಲಭಿಸಲಿದೆ.
ಆದರೆ ಕಾಂಗ್ರೆಸ್ ಪಕ್ಷದಲ್ಲಿ 60ಕ್ಕೂ ಅಧಿಕ ಆಕಾಂಕ್ಷಿಗಳು ವಿಧಾನ ಪರಿಷತ್ ಟಿಕೆಟ್ ಗಾಗಿ ಪೈಪೋಟಿ ನಡೆಸುತ್ತಿದ್ದು, ಪಕ್ಷದ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ. ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಲವರಿಗೆ ವಿಧಾನ ಪರಿಷತ್ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದು, ಹೀಗಾಗಿ ಲಾಬಿ ಜೋರಾಗಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಾಗಿ ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಅವರ ಪುತ್ರ ಯತೀಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ಪಕ್ಕಾ ಎನ್ನಲಾಗಿದ್ದು, ಇನ್ನುಳಿದ ಆರು ಸ್ಥಾನಗಳಿಗಾಗಿ ಅಭ್ಯರ್ಥಿಗಳ ಆಯ್ಕೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿದುಬಂದಿದೆ.