ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ 13 ಮಂದಿಯನ್ನು ಬಂಧಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಕಲಬುರಗಿಯ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಪ್ರತ್ಯೇಕ ರಾಜ್ಯ ಧ್ವಜ ಹಿಡಿದುಕೊಂಡು ಕೋರ್ಟ್ ರಸ್ತೆ ಮೂಲಕ ವಲ್ಲಭಬಾಯಿ ಪಟೇಲ್ ವೃತ್ತದ ಕಡೆಗೆ ಮುಖಂಡರು ಹೊರಟಿದ್ದ ಸಂದರ್ಭದಲ್ಲಿ ಪೊಲೀಸರು ಮಾರ್ಗಮಧ್ಯೆ ತಡೆದು ಅವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ.
ಸಮಿತಿ ಮುಖಂಡ ಎಂ.ಎಸ್. ಪಾಟೀಲ್ ನರಿಬೋಳ, ಲಕ್ಷ್ಮಿಕಾಂತ ಸ್ವಾದಿ, ವಿನೋದ ಕುಮಾರ. ಉದಯಕುಮಾರ ಜೇವರ್ಗಿ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ನಿರ್ಲಕ್ಷ ತೋರಿದೆ ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಮುಖಂಡರು ಆರೋಪಿಸಿದ್ದಾರೆ. ಕಲಬುರಗಿಯನ್ನು 2ನೇ ರಾಜಧಾನಿಯಾಗಿ ಎಂದು ಘೋಷಿಸಬೇಕು. ಇಲ್ಲದಿದ್ದರೆ ತೆಲಂಗಾಣ ಮಾದರಿ ಪ್ರತ್ಯೇಕ ರಾಜ್ಯ ಹೋರಾಟ ಚುರುಕುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.