ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಪ್ರತಿ ವರ್ಷ ಒದಗಿಸುವ 5000 ಕೋಟಿ ರೂಪಾಯಿ ವೆಚ್ಚ ಮಾಡಲು ಜುಲೈ 15ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ 5000 ಕೋಟಿ ರೂ. ನೀಡುವ ಭರವಸೆ ನೀಡಿದ್ದು, ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಕ್ರಿಯಾ ಯೋಜನೆ ರೂಪಿಸುವಂತೆ ತಿಳಿಸಿದ್ದಾರೆ.
ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಆರಂಭಿಸಬೇಕು. ಅನುಮೋದನೆಯಾದ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ನಡೆಸಬೇಕು ಎಂದು ತಿಳಿಸಿದ್ದಾರೆ.
ಮಾನವ ಅಭಿವೃದ್ಧಿ ಸೂಚ್ಯಂಕ ಗಮನದಲ್ಲಿಟ್ಟುಕೊಂಡು ಪ್ರಗತಿ ಕಾಣುವ ರೀತಿ ಫಲಿತಾಂಶ ಬರುವಂತೆ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಬೇಕೆಂದು ಸಿಎಂ ಹೇಳಿದ್ದಾರೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಭಾಗ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕ ಸುಧಾರಣೆ ತರಲು ಕೆಲಸ ಮಾಡಬೇಕು. ಹಾಸ್ಟೆಲ್, ಅಂಗನವಾಡಿ, ವಸತಿ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ರಸ್ತೆಮ ಕುಡಿಯುವ ನೀರುಮ ನೀರಾವರಿ ಮೊದಲಾದ ಮೂಲ ಸೌಕರ್ಯಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಪ್ರೌಢಶಾಲೆ, ಪಿಯು ಕಾಲೇಜು, ಪದವಿ ಕಾಲೇಜುಗಳ ಸ್ಥಾಪನೆಗೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದಿನ ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ ಶೇಕಡ 25ರಷ್ಟು ಅನುದಾನವನ್ನು ಶಿಕ್ಷಣಕ್ಕೆ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.