ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 5267 ಶಿಕ್ಷಕರ ಹುದ್ದೆ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಶಿಕ್ಷಣ ಇಲಾಖೆ ಅನುಮತಿ ನೀಡಿ ಆದೇಶಿಸಿದೆ.
ಒಂದರಿಂದ 5ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ 4424 ಹುದ್ದೆಗಳು, ಆರರಿಂದ ಎಂಟನೇ ತರಗತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 78 ಹುದ್ದೆಗಳಿಗೆ, ಹಾಗೂ 380 ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 2 ಸೇರಿ ಒಟ್ಟು 5267 ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳ ನೇಮಕಾತಿ ಪೂರ್ವ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮತ್ತು ನೇಮಕಾತಿ ಆದೇಶ ನೀಡವ ಮೊದಲು ಹುದ್ದೆಗಳಿಗೆ ತಗಲಬಹುದಾದ ಹಣಕಾಸು ಮಾಹಿತಿಗಳನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
2024- 25 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಶಾಲೆಗಳಿಗೆ ಮಂಜೂರಾದ ಒಟ್ಟು ಹುದ್ದೆಗಳಲ್ಲಿ ಸದ್ಯ 6584 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ ಶೇಕಡ 80 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.