alex Certify ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕನ್ನಡ, ಇಂಗ್ಲಿಷ್ ಎರಡರಲ್ಲೂ ಉತ್ತರ ಬರೆಯಲು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕನ್ನಡ, ಇಂಗ್ಲಿಷ್ ಎರಡರಲ್ಲೂ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆಯನ್ನು ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 23ನೇ ಸಾಮಾನ್ಯ ಸಭೆ ತೀರ್ಮಾನಿಸಿದೆ.

ಇದರ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಬೇಕೆಂಬ ಎನ್‌ಇಪಿ ಆಶಯವನ್ನು ಸಾಧಿಸಲು ಯುಜಿಸಿ ಸೂಚನೆಯಂತೆ ಎಲ್ಲ ವಿಷಯಗಳಿಗೆ ಸಂಬಂಧಿಸಿದ ಗುಣಮಟ್ಟದ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದರ ರೂಪುರೇಷೆಯನ್ನು ತೀರ್ಮಾನಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸಭೆಯ ಬಗ್ಗೆ ಮಾತನಾಡಿದ ಅವರು, ಉನ್ನತ ಶಿಕ್ಷಣದ ಹಂತದಲ್ಲಿ ಕನ್ನಡದ ಬಳಕೆಯನ್ನು ಗರಿಷ್ಠ ಪ್ರಮಾಣದಲ್ಲಿ ಉತ್ತೇಜಿಸಲು ಕೂಡ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ, ಹೊಸದಾಗಿ ಬುಡಕಟ್ಟು ವಿಶ್ವವಿದ್ಯಾಲಯದ ಸ್ಥಾಪನೆಯ ಬದಲಿಗೆ ಈಗಾಗಲೇ ಅಸ್ತಿತ್ವದಲ್ಲಿರುವ ಕರ್ನಾಟಕ ರಾಜ್ಯ ಜಾನಪದ ವಿ.ವಿ.ಯಲ್ಲೇ ಬುಡಕಟ್ಟು ಅಧ್ಯಯನಕ್ಕೂ ಸಮರ್ಪಕ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದ್ದಾರೆ.

ಇದುವರೆಗೂ ಪದವಿ ಮತತ್ತು ಸ್ನಾತಕೋತ್ತರ ಪದವಿಗಳಲ್ಲಿ ಯಾವುದೇ ಒಂದು ವಿಷಯದ ಪರೀಕ್ಷೆಯನ್ನು ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಬರೆಯಲು ಅವಕಾಶವಿತ್ತು. ಆದರೆ ಇನ್ನುಮುಂದೆ ಒಂದೇ ವಿಷಯವನ್ನು ಎರಡು ಭಾಷೆಗಳಲ್ಲಿಯೂ ಬರೆಯಬಹುದು. ವಿದ್ಯಾರ್ಥಿಗಳಿಗೆ ಆಯಾಯ ಪ್ರಶ್ನೆಗೆ ಉತ್ತರಿಸಲು ಯಾವ ಭಾಷೆ ಸೂಕ್ತವೆನಿಸುತ್ತದೋ ಅದರಲ್ಲೇ ಉತ್ತರ ಬರೆಯುವ ಅವಕಾಶ ಕೊಡಲಾಗುವುದು. ಒಂದು ಪ್ರಶ್ನೆಗೆ ಕನ್ನಡದಲ್ಲಿ ಉತ್ತರ ಬರೆದು, ಇನ್ನೊಂದು ಪ್ರಶ್ನೆಗೆ ಇಂಗ್ಲಿಷ್‌ನಲ್ಲಿ ಬೇಕಾದರೂ ಉತ್ತರಿಸಬಹುದು. ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಈಗಾಗಲೇ ಈ ಸೌಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...