ಬೆಳಗಾವಿ: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ರಾಜ್ಯೋತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪ್ರತಿ ವರ್ಷದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
ಜಿಲ್ಲೆಯ 25 ಜನರಿಗೆ ಗೌರವ ಸನ್ಮಾನ:
ಈ ಬಾರಿಯ ರಾಜ್ಯೋತ್ಸವದಲ್ಲಿ ಜಿಲ್ಲಾಡಳಿತದ ವತಿಯಿಂದ ಕನ್ನಡಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸೇರಿ ಒಟ್ಟಾರೆ 25 ಜನರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.
ರಾಜ್ಯೋತ್ಸವಸ ಮೆರವಣಿಗೆಯಲ್ಲಿ 75 ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡದ ಐದು ಹಾಡುಗಳು:
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹುಯಿಲಗೋಳ ನಾರಾಯಣರಾಯರ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ಕುವೆಂಪು ಅವರ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರೆ ಅವರ “ಒಂದೇ ಒಂದೇ ಕರ್ನಾಟಕವೊಂದೇ”, ಸಿದ್ದಯ್ಯ ಪುರಾಣಿಕ ಅವರ “ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ” ಹಾಗೂ ಚನ್ನವೀರ ಕಣವಿ ಅವರ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಈ ಐದು ಹಾಡುಗಳನ್ನು ಹಾಡುವ ಮೂಲಕ ಕನ್ನಡಾಂಬೆಗೆ ಗೀತ ಗಾಯನದ ನಮನ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಂಗೋಲಿ ಹಾಕಿ, ಗಾಳಿಪಟ ಹಾರಿಸಿ, ಹಣತೆ ಬೆಳಗಿಸುವುದರೊಂದಿಗೆ ಸಂಭ್ರಮ ಹೆಚ್ಚಿಸಲು ಮನವಿ
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ಸಂಭ್ರಮವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ನವೆಂಬರ್ 1 ರಂದು ಜಿಲ್ಲೆಯ ಎಲ್ಲರೂ ತಮ್ಮ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ “ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯವನ್ನು ಬರೆಯುವಂತೆ ಅವರು ವಿನಂತಿಸಿದ್ದಾರೆ.
ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಂದರ್ಭದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ನಾಡಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೆ ಗೌರವ ಸಲ್ಲಿಸಬೇಕು. ನವೆಂಬರ್ 1 ರಂದು ಸಂಜೆ 5 ಗಂಟೆಗೆ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಧದ ಗಾಳಿಪಟಗಳನ್ನು ಹಾರಿಸುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವವನ್ನು ಆಚರಿಸಬೇಕು ಎಂದು ತಿಳಿಸಿದ್ದಾರೆ.
ಅದೇ ರೀತಿ ನವೆಂಬರ್ 1 ರಂದು ಸಂಜೆ 7 ಗಂಟೆಗೆ ಪ್ರತಿಯೊಬ್ಬರು ತಮ್ಮ ಮನೆಗಳು, ಕಚೇರಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು ಎಂದು ನಾಗರಿಕರಲ್ಲಿ ಮನವಿ ಮಾನವಿಕೊಂಡರು.
ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.