ಬೆಂಗಳೂರು: ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಭೇಟಿಯಾಗಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಣಾ ವೇದಿಕೆ ಪದಾಧಿಕಾರಿಗಳೊಂದಿಗೆ ಭೇಟಿಯಾದ ನಾರಾಯಣಗೌಡ ಅಭಿನಂದಿಸಿದ್ದಾರೆ.
ನಮ್ಮ ಸರ್ಕಾರವು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ರಾಜ್ಯದ ಖಾಸಗಿ ವಲಯದಲ್ಲಿ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ, ಇದನ್ನು ಸರಿಪಡಿಸಿ ನಮ್ಮವರಿಗೆ ನಮ್ಮ ನೆಲದಲ್ಲಿ ಬದುಕು ಕಟ್ಟಿಕೊಡಬೇಕೆಂಬುದು ನಮ್ಮ ಸರ್ಕಾರದ ಸದಾಶಯವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.