
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಪುರಭವನದ ಎದುರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ತೀವ್ರ ಸ್ವರೂಪ ಪದೆದುಕೊಂಡಿದೆ. ಹೋರಾಟಗಾರರು ರಾಜ್ಯ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಲು ಮುಂದಾಗಿದ್ದಾರೆ.
ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಬಿಎಂಟಿಸಿ ಬಸ್ ನಲ್ಲಿ ತುಂಬಿ ಕರೆದೊಯ್ದಿದ್ದಾರೆ. ಬಸ್ ನಲ್ಲಿದ್ದ ಪ್ರತಿಭಟನಾಕಾರರು ಬಸ್ ನ ಗಾಜು ಒಡೆದು ಕಿಡಿಕಾರಿದ್ದಾರೆ.
ಇನ್ನೊಂದೆಡೆ ಫ್ರೀಡಂ ಪಾರ್ಕ್ ನಲ್ಲಿ ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದು, ಟೈಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.