ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿದೆ.
ರಾಜ್ಯದಲ್ಲಿ ಪರೀಕ್ಷೆ ಆರಂಭದ ದಿನವೇ ಮಾರ್ಚ್ 9 ರಂದು ಕಾಂಗ್ರೆಸ್ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಆದರೆ, ಮಾರ್ಚ್ 9 ರ ಬಂದ್ ವೇಳೆ ಪಿಯುಸಿ ಪರೀಕ್ಷೆಗೆ ಅಡ್ಡಿ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದ ಸ್ವಾಭಿಮಾನ ಉಳಿಸಲು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು 40% ಕಮಿಷನ್ ವಿರುದ್ಧ ಮಾರ್ಚ್ 9 ರಂದು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಸಾಂಕೇತಿಕ ಬಂದಗೆ ಕರೆ ನೀಡಿದೆ. ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ, ಆಸ್ಪತ್ರೆಗಳ ಕಾರ್ಯನಿರ್ವಹಣೆ, ಸಾರಿಗೆ ವ್ಯವಸ್ಥೆಗೆ ಯಾವುದೇ ಅಡ್ಡಿಯುಂಟು ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತೆರಳಲು ಯಾವುದೇ ಅಡ್ಡಿಯಾಗುವುದಿಲ್ಲ. ಶಿಕ್ಷಣ ಸಂಸ್ಥೆಗಳು, ಸಾರಿಗೆ ವ್ಯವಸ್ಥೆ, ಆಸ್ಪತ್ರೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ಎರಡು ಗಂಟೆ ವ್ಯಾಪಾರ, ವಹಿವಾಟು ಬಂದ್ ಮಾಡಿ ಸಹಕಾರ ನೀಡುವಂತೆ ಜನರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.