
ಬೆಂಗಳೂರು: ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ, ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲವೆಡೆ ಬಂದ್ ಆಚರಿಸಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಕನ್ನಡಪರ ಸಂಘಟನೆಗಳು ಅಲ್ಲಲ್ಲಿ ಪ್ರತಿಭಟನೆ ಪ್ರಾರಂಭಿಸಿವೆ. ಮಧ್ಯಾಹ್ನದ ವೇಳೆಗೆ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡಪರ ಸಂಘಟನೆಗಲಿಂದ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ ಬಸ್ ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಆದರೆ ಜನರ ಓಡಾಟ ಕಡಿಮೆಯಾಗಿದೆ.
ವೀಕೆಂಡ್ ಜೊತೆಗೆ ಬ್ಯಾಂಕ್ ಗಳಿಗೆ ರಜೆ ಇರುವ ನಡುವೆಯೂ ಜನಸಂಚಾರ ವಿರಳವಾಗಿದೆ. ಚಿತ್ರಮಂದಿರಗಳು, ಮಾಲ್ ಗಳು ಬಂದ್ ಆಗಿವೆ. ಆನೇಕಲ್ ನಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀರಗೊಳಿಸಿವೆ.
ಬಸ್ ಸಂಚಾರ ತಡೆದು, ರಸ್ತೆಯಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾರೆ. ಪೆಟ್ರೋಲ್ ಬಂಕ್ ಬಳಿ ಜಮಾಯಿಸಿರುವ ಪ್ರತಿಭಟನಾಕಾರರು ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.