ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಸೆ. 29ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೆ. 29ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗಳವಾರವಷ್ಟೇ ಬೆಂಗಳೂರು ಬಂದ್ ನಡೆಸಲಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಗುರುವಾರ ಈದ್ ಮಿಲಾತ್ ರಜೆ ಇದ್ದು, ಶುಕ್ರವಾರ ಕರ್ನಾಟಕ ಬಂದ್ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.