ಚಿತ್ರದುರ್ಗ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮತ್ತೊಂದೆಡೆ ಜಿಲ್ಲೆ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಭಾವಚಿತ್ರಗಳ ಮೇಲೆ ರಕ್ತ ಚಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದ ಬೆನ್ನಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.
ಕರುನಾಡ ಜೀವನದಿ ಕಾವೇರಿಗಾಗಿ ರಾಜ್ಯಾದ್ಯಂತ ಬಂದ್ ಪ್ರತಿಭಟನೆ ಆರಂಭವಾಗಿದ್ದು, ರೈತ ಪರ ಸಂಘಟನೆ, ಕನ್ನಡ ಪರ ಸಂಘಟನೆಗಳು ಹಲವೆಡೆ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.