ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಕಾವೇರಿಗಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ರೈತ ಸಂಘಟನೆಗಳ ಪ್ರತಿಭಟನೆ ಭುಗಿಲೆದ್ದಿವೆ.
ಬೆಂಗಳೂರಿನ ಟೌನ್ ಹಾಲ್ ಮುಂಭಾಗ ರೈತ ಸಂಘಟನೆಗಳು ತಟ್ಟೆ, ಪ್ಲೇಟ್ ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ರೈತರನ್ನು ವಶಕ್ಕೆ ಪಡೆದು, ಫ್ರೀಡಂ ಪಾರ್ಕ್ ಗೆ ಕರೆದೊಯ್ದು ಬಿಟ್ಟಿದ್ದಾರೆ.
ಇನ್ನೊಂದೆಡೆ ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಆರ್.ಟಿ.ನಗರದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ರಸ್ತೆ ತಡೆಗೆ ಮುಂದಾಗಿದ್ದು, ಪೊಲೀಸರು, ಪ್ರವೀಣ್ ಶೆಟ್ಟಿ ಹಾಗೂ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನವಾಗುತ್ತಿದ್ದಂತೆ ವಿವಿಧ ಸಂಘಟನೆಗಳ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಇನ್ನೊಂದೆಡೆ ಕನ್ನಡ ಚಿತ್ರರಂಗದ ನಟ-ನಟಿಯರು ಶಿವಾನಂದ ಸರ್ಕಲ್ ಬಳಿ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ.