ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
ಕಾವೇರಿ ನೀರಿಗಾಗಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದು, ಕೆಂಪೇಗೌಡ ಅಂತರಾಷ್ಟ್ರ ವಿಮಾನ ನಿಲ್ದಾಣಕ್ಕೂ ಪ್ರತಿಭಟನೆಯ ಬಿಸಿ ತಟ್ಟಿದೆ.
ಕರ್ನಾಟಕ ಸೇನೆ ಕಾರ್ಯಕರ್ತರು ವಿಮಾನ ಟಿಕೆಟ್ ಪಡೆದು ಕೆಂಪೇಗೌಡ ಅಂತರಾಷ್ಟ್ರ ವಿಮಾನ ನಿಲ್ದಾಣದ ಒಳಗೆ ಹೋಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಐದು ಜನ ಕರ್ನಾಟಕ ಸೇನೆ ಕಾರ್ಯಕರ್ತರು ಇಂಡಿಗೋ 7731 ವಿಮಾನದ ಟಿಕೆಟ್ ಬುಕ್ ಮಾಡಿಕೊಂಡು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದಾರೆ. ಬಳಿಕ ವಿಮಾನದ ಬಳಿ ಹೋಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಕಾರ್ಯಕರ್ತರನ್ನು ತಡೆದು ಬಂಧಿಸಿದ್ದಾರೆ.