ಬೆಂಗಳೂರು: ಕಾವೇರಿ ನೀರಿಗಾಗಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಳು ತೀವ್ರಗೊಂಡಿದೆ.
ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ರೈತ ಮುಖಂಡರು, ಸ್ಯಾಂಡಲ್ ವುಡ್ ನಟ-ನಟಿಯರು ಪ್ರತಿಭಟನೆ ನಡೆಸುತ್ತಿದ್ದು, ಕಾವೇರಿ ನಮ್ಮದು ಎಂದು ಘೋಷಣೆಗಳನ್ನು ಕೂಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಈ ನಡುವೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾಧರಿಸಿ ಬಂದಿರುವ ವಾಟಾಳ್ ನಾಗರಾಜ್, ತಲೆಯ ಮೇಲೆ ಖಾಲಿ ಕೊಡ ಹೊತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಪೊಲೀಸ್ ಭದ್ರತೆ ನಿಯೋಜಿಸಿ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ದಬ್ಬಾಳಿಕೆ ನಡೆಸುತ್ತಿದ್ದಾರೆ. ಪೊಲೀಸ್ ಗೂಂಡಾಗಿರನ್ನು ಖಂಡಿಸುತ್ತೇನೆ ಎಂದು ಕಿಡಿಕಾರಿದರು.
ಕಾವೇರಿ ನೀರಿಗಾಗಿ ಕರೆ ನೀಡಿರುವ ಬಂದ್ ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ನಾನು ಕಪ್ಪು ಬಟ್ಟೆ ಧರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದೇನೆ. ನ್ಯಾಯ ದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಿರಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.