ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬುಧವಾರ 650 ಸಹಾಯಕ ಪ್ರಾಧ್ಯಾಪಕರು ಮತ್ತು 1,200 ದಾದಿಯರನ್ನು ನೇಮಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಸಚಿವರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಡಿಯಲ್ಲಿ ಬರುವ 33 ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಖಾಲಿ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲು ಕೆಇಎಗೆ ದಾರಿ ಮಾಡಿಕೊಡಲು ಇಲಾಖೆಯ ನೇಮಕಾತಿ ಬೈಲಾಗಳನ್ನು ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ.