
ಬೆಂಗಳೂರು: ರಾಜ್ಯದಲ್ಲಿ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎರಡು ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶಗಳಲ್ಲಿಯೂ ವಾಯುಭಾರ ಕುಸಿತವಾಗಲಿದೆ ಎಂದು ತಿಳಿಸಿದ್ದಾರೆ.