ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್, ಕೇಸರಿ ಶಾಲು ಗದ್ದಲದ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
ಸಮವಸ್ತ್ರ ಧರಿಸುವುದು ಮಾಮೂಲಿ ವಿಷಯ, ಅವರು ಅದನ್ನು ಏಕೆ ಸಮಸ್ಯೆ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ಅವರು, ಶಾಲೆ ಮಾರ್ಗಸೂಚಿ ಹೊರಡಿಸಿದಾಗ, ಪ್ರತಿಯೊಬ್ಬರೂ ಅದನ್ನು ಅನುಸರಿಸಬೇಕು, ಡ್ರೆಸ್ ಕೋಡ್ ಬಗ್ಗೆ ಗಲಾಟೆ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಪರ ಮತ್ತು ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡ ಹಿನ್ನಲೆಯಲ್ಲಿ ಪಾರ್ಲಿಮೆಂಟ್ ಭವನದ ಹೊರಗೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಡ್ರೆಸ್ ಕೋಡ್ ಪಾಲಿಸದಿರುವ ವಿದ್ಯಾರ್ಥಿಗಳನ್ನು ಪ್ರಚೋದಿಸುವವರು ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲವು ರಾಜಕಾರಣಿಗಳು ಮತ್ತು ಮತಾಂಧರು ಇದನ್ನು ಸಮಸ್ಯೆ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ವಿಷಯವು ನ್ಯಾಯಾಲಯದಲ್ಲಿದೆ. ರಾಜ್ಯ ಸರ್ಕಾರ ಅದರ ತೀರ್ಪಿಗಾಗಿ ಕಾಯಬಹುದು. ಯಾರೂ ಕಾನೂನು ಮತ್ತು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಉಲ್ಲಂಘನೆಯ ಸಂದರ್ಭದಲ್ಲಿ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳು ಮತ್ತು ಜನರು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಕರ್ನಾಟಕ ಹೈಕೋರ್ಟ್ ಮನವಿ ಮಾಡಿದೆ. ಕರಾವಳಿಯ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೆಲ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.