
ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಎಂಇಎಸ್ ಪುಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷನಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಕೊಲ್ಲಾಪುರ ಭಾಗದಲ್ಲಿ ಶಿವಸೇನೆ, ಎಂಇಎಸ್ ಕಾರ್ಯಕರ್ತರು ಕರ್ನಾಟಕದ ಬಸ್ ಗಳನ್ನು ತಡೆದು ಧ್ವಜ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ ಹಿರಿಯೂರು ಬಳಿ ಮಹಾರಾಷ್ಟ್ರ ಬಸ್ ತಡೆದು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಸ್ ಚಾಲಕನ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಬೆಳಗಾವಿ ಗಡಿವರೆಗೆ ಮಾತ್ರ ಬಸ್ ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ ಬಸ್ ಗಳು ಎಂದಿನಂತೆ ಮಹಾರಾಷ್ಟ್ರಕ್ಕೆ ತೆರಳುತ್ತಿವೆ ಎಂದು ತಿಳಿದುಬಂದಿದೆ.