ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದರೆ ಇನ್ನು ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಕಡೂರು, ಕೊಪ್ಪ, ಶೃಂಗೇರಿಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಕಾಲಿಕ ಮಳೆಯಿಂದಾಗಿ ಭತ್ತ, ಅಡಿಕೆ ಬೆಳೆ ನಾಶವಾಗಿದೆ. ಈವರೆಗೆ ಬರದಿಂದ ತೊಂದರೆಗೆ ಸಿಲುಕಿದ್ದ ರೈತರಿಗೆ ಇದೀಗ ಅಕಾಲಿಕ ಮಳೆ ಮತ್ತೊಂದು ಸಮಸ್ಯೆ ತಂದೊಡ್ಡಿದೆ. ಕೊಯ್ಲು ಮಾಡಿದ್ದ ಅಡಿಕೆ, ಭತ್ತ ನೀರುಪಾಲಾಗಿದ್ದು. ಅಕಾಲಿಕ ಮಳೆಗೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಿದ್ದಾರೆ.
ಹಾಸನ, ಶಿವಮೊಗ್ಗ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ದಿಢೀರ್ ಮಳೆಯಿಂದಾಗಿ ಚಿಕ್ಕಮಗಳೂರಿನಲ್ಲಿ ಕಾಫಿ ಬೆಳೆಗಾರರೂ ಸಮಸ್ಯೆಗೆ ಸಿಲುಕಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 4-5 ದಿನ ಮಳೆ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.