
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಕರ್ನಾಟಕದ ಧಾರವಾಡ, ಗದಗ, ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.