ಬೆಂಗಳೂರು : ರಾಜ್ಯದಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕೂಡ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರಿನ ಪ್ರಭಾವ ಇಂದು ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳ ಮಳೆಯ ಅಬ್ಬರ ಮುಂದುವರೆಯಲಿದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ, ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಬೀದರ್ ಮತ್ತು ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಆರ್ಭಟಕ್ಕೆ ಮತ್ತೆ ಮೂವರು ಬಲಿ
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧ ಅವಘಡಗಳಲ್ಲಿ ಬುಧವಾರ ಮತ್ತೆ ಮೂವರು ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬುಡರಕಟ್ಟೆಯ ಈರಮ್ಮ ಪತ್ತೆಮ್ಮನವರ (95) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕುರ್ಕೆಯಲ್ಲಿ ಮನೆ ಕುಸಿದು ಗೌರಮ್ಮ (62)ಎಂಬುವರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೊಸಸಿದ್ದೇಶ್ವರ ಹಳ್ಳಿಯಲ್ಲಿ ರೇವಮ್ಮ (63) ಎಂಬುವರು ಹಳ್ಳ ದಾಟುವಾಗ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಇಂದು 11 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಇಂದೂ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ವಿಜಯನಗರ, ಕೊಪ್ಪಳ, ದಾವಣಗೆರೆ ಬೀದರ್, ಬಳ್ಳಾರಿ, ರಾಯಚೂರು, ಧಾರವಾಡ, ಬೆಳಗಾವಿ, ಚಿಕ್ಕಮಗಳೂರಿನ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.