ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇನ್ನೂ ಮೂರು ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಆತಂಕ ಶುರುವಾಗಿದೆ. ರಾಜ್ಯದ ವಿವಿಧೆಡೆ ಸೇತುವೆ, ರಸ್ತೆಗಳು ಜಲಾವೃತವಾಗಿ 100 ಕ್ಕೂ ಹೆಚ್ಚು ಕಡೆ ಸಂಚಾರ-ಸಂಪರ್ಕ ಕಡಿತಗೊಂಡಿದೆ.
ಮಹಾಮಳೆಗೆ ಐವರು ಬಲಿ
ರಾಜ್ಯದಲ್ಲಿ ಮಳೆ ಸಂಬಂಧಿ ಅನಾಹುತಕ್ಕೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳದಲ್ಲಿ ಮನೆ ಕುಸಿದು ಬಸಮ್ಮ (35), ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಾಕನೂರು ಗ್ರಾಮದ ಬಳಿಯ ತುಂಗಾಭದ್ರಾ ನದಿಯಲ್ಲಿ ಮುಳುಗಿ ಮಂಜುನಾಥ್ ಬಸವರಾಜ ಆನಂದಿ (27), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಹರ್ಕಾಡಿಯಲ್ಲಿ ಗೋಕುಲ್ ದಾಸ್ (53) ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಕೆರೆಯಲ್ಲಿ ಮುಳುಗಿ ಮಣಿಕಂಠ ಮಂಜುನಾಥ್ ನಾಯ್ಕ್ (17), ಬೈಂದೂರು ತಾಲೂಕಿನ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದು ಭದ್ರಾವತಿಯ ಶರತ್ ಕುಮಾರ್ (23) ಸಾವನ್ನಪ್ಪಿದ್ದಾರೆ.
ಈ ಜಿಲ್ಲೆಗಳಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 25 ರ ಇಂದೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿ ಕಾಲೇಜುಗಳವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಕೂಡ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ನಾಳೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಬೆಳೆ ಪರಿಸ್ಥಿತಿಯ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ.