ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಮಧ್ಯೆ ಮತ್ತೆ ಲಾಕ್ ಡೌನ್ ಜಾರಿಗೊಳಿಸಲಾಗುತ್ತಾ ಎಂಬ ಪ್ರಶ್ನೆ ಮೂಡಿತ್ತು. ಆದರೆ ಸೋಮವಾರದಂದು ಇದಕ್ಕೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದರು.
ಇಂದು ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿರುವ ಅವರು, ಈ ಹಿಂದೆ ಲಾಕ್ ಡೌನ್ ಜಾರಿಯಾಗಿದ್ದ ವೇಳೆ ಸಾರ್ವಜನಿಕರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವುದಿಲ್ಲವೆಂದಿದ್ದಾರೆ.
ಇಂದು ಶ್ರೀ ಶಂಕರ ಮಠಕ್ಕೆ ಭೇಟಿ ನೀಡಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿದ್ದ ಧನ್ವಂತರಿ ಯಾಗದಲ್ಲಿ ಪಾಲ್ಗೊಂಡಿದ್ದ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಂವಾದದ ವೇಳೆ ಈಗಿರುವ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.