alex Certify ಆಕ್ಸಿಜನ್, ಲಸಿಕೆ ವಿಚಾರದಲ್ಲೂ ಕನ್ನಡಿಗರ ಬಗ್ಗೆ ಕೇಂದ್ರದ ತಾರತಮ್ಯ; ಇದು ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ…..?; ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕ್ಸಿಜನ್, ಲಸಿಕೆ ವಿಚಾರದಲ್ಲೂ ಕನ್ನಡಿಗರ ಬಗ್ಗೆ ಕೇಂದ್ರದ ತಾರತಮ್ಯ; ಇದು ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ…..?; ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಆಕ್ಸಿಜನ್ ಪೂರೈಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ. ನ್ಯಾಯಾಲಯ ಹೇಳಿದ್ದ 1200 ಮೆಟ್ರಿಕ್ ಟನ್ ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ? ಲಸಿಕೆ ನೀಡಿಕೆಯಲ್ಲಿಯೂ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ. 3 ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್‌ ಸಿಕ್ಕಿದೆ. ಎರಡನೇ ಡೋಸ್‌ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್‌ ಪಡೆಯುವವರು ಕಾಯಬೇಕು,’ ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು ಎಂದು ಎಚ್ಚರಿಸಿದ್ದಾರೆ.‌

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...