ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ನಿಜಕ್ಕೂ ಅಮೂಲ್ಯ. ಹೀಗಾಗಿ ಸರ್ಕಾರ ಅವರುಗಳಿಗೆ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಮತ್ತೊಂದು ಸಿಹಿ ಸುದ್ದಿಯನ್ನು ನೀಡಲಾಗಿದೆ.
ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸಹಕಾರ ಇಲಾಖೆ ವತಿಯಿಂದ ಕೋವಿಡ್ -19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ ಕೊಡಮಾಡುವ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮಕ್ಕೆ ದಾವಣಗೆರೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಕೊರೋನಾ ಸಂಕಷ್ಟಗಳ ಕಾಲದಲ್ಲಿ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ 53 ಕೋಟಿ ರೂಪಾಯಿಯನ್ನು ಸಂಗ್ರಹಿಸಿಕೊಟ್ಟಿದ್ದೇನೆ. ಇನ್ನು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಕೊಡುವ ವಿಚಾರದಲ್ಲೂ ಮುಖ್ಯಮಂತ್ರಿಗಳಿಗೆ ಸಹಕಾರ ಕೊಡಲಾಗಿದೆ ಎಂದು ಸಚಿವರು ತಿಳಿಸಿದರು.