ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಕೊರೊನಾ ನಿಯಂತ್ರಣಕ್ಕೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮ ಜೀವದ ಹಂಗನ್ನು ತೊರೆದು ಅವಿರತವಾಗಿ ಶ್ರಮಿಸುತ್ತಿದ್ದು, ಇವರುಗಳ ಈ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೈಜೋಡಿಸಿದ್ದಾರೆ.
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಸಿಲು – ಮಳೆಯನ್ನು ಲೆಕ್ಕಿಸದೆ ಮನೆಮನೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರು ಸಾರ್ವಜನಿಕರ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸಿದ್ದರು. ಇವರ ಈ ಕಾರ್ಯವನ್ನು ಗೌರವಿಸಿ ರಾಜ್ಯ ಸರ್ಕಾರ ಪ್ರೋತ್ಸಾಹ ಧನವನ್ನು ನೀಡಿತ್ತು.
ಆದರೆ ತಮ್ಮ ಬಹುದಿನಗಳ ಬೇಡಿಕೆಯಾದ ವೇತನ ಹೆಚ್ಚಳ ಮಾಡುವಂತೆ ಆಶಾ ಕಾರ್ಯಕರ್ತೆಯರು ಸರ್ಕಾರವನ್ನು ಒತ್ತಾಯಿಸಿದ್ದಲ್ಲದೆ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಸರ್ಕಾರ ಇದಕ್ಕೆ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದ್ದು, ಎರಡು ಮೂರು ದಿನಗಳಲ್ಲಿ ಈ ಕುರಿತು ಆದೇಶ ಹೊರಬೀಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.