
ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ರೈತರ ಪ್ರತಿಭಟನೆಗೆ ಸಾಥ್ ನೀಡಿದ್ದ ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈತ ವಿರೋಧಿ ಕಾಯಿದೆ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ರೈತರು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು. ರಸ್ತೆ ಮಧ್ಯೆಯೇ ಉರುಳುಸೇವೆ ನಡೆಸಿದ್ದ ರೈತರು ಸರ್ಕಾರದ ನಡೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯುತ್ತಿದ್ದ ಈ ಪ್ರತಿಭಟನೆಗೆ 34ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದವು.
ರೈತರ ಪ್ರತಿಭಟನೆಗೆ ನಟ ಚೇತನ್ ಕೂಡ ಬೆಂಬಲ ನೀಡಿ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ಭಾಷಣ ಆರಂಭಿಸುತ್ತಿದ್ದಂತೆಯೇ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವುದನ್ನು ಅರಿತ ಪೊಲೀಸರು ನಟ ಚೇತನ್, ರೈತ ಮುಖಂಡರು ಸೇರಿದಂತೆ 300ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, 5 ಬಸ್ ಗಳಲ್ಲಿ ಕರೆದೊಯ್ದಿದ್ದಾರೆ.